City News Political

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರತೆಗಾಗಿ 82,157 ಪೊಲೀಸರ ನಿಯೋಜನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸುಸೂತ್ರವಾಗಿ ನಡೆಯಲು ಸಕಲ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯಾದ್ಯಂತ ಬಿಗಿ ಪೊಲಿಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಡಿಜಿ ಮತ್ತು ಐಜಿಪಿ ನೀಲಮಣಿ ಎನ್. ರಾಜು ಅವರು ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಭದ್ರತಾ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಜ.17 ರಿಂದಲೇ ಶಾಂತ ರೀತಿಯಲ್ಲಿ ಚುನಾವಣೆ ನಡೆಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ನಿಯಂತ್ರಣದಲ್ಲಿದೆ. ಎಡಿಜಿಪಿ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ತಂಡ ರಚಿಸಲಾಗಿದೆ ಎಂದು ನೀಲಮಣಿ ರಾಜು ಅವರು ಮಾಹಿತಿ ನೀಡಿದರು.

ರಾಜ್ಯಾದ್ಯಂತ 58,302 ಮಟ್ಟೆಗಳಿದ್ದು, ಅದರಲ್ಲಿ ಶೇ. 28 ರಷ್ಟು ಅಂದರೆ 12 ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಒಬ್ಬ ಹೆಡ್ಕಾನ್ಸ್ಟೇಬಲ್ ನಿಯೋಜಿಸಲಾಗಿದ್ದು, ಅವರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ರಾಜ್ಯ ಪೊಲೀಸರು, ಅರೆ ಸೇನಾ ಪಡೆ, ಸಿಐಎಸ್ಎಫ್, ಸಿಆರ್ಪಿಎಫ್ ಪಡೆಗಳು ಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿವೆ. ಹೊರ ರಾಜ್ಯದ ಒಟ್ಟು 7 ಸಾವಿರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 82,157 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಾಗೂ ಕೇಂದ್ರೀಯ ಭದ್ರತಾ ಪಡೆಗಳ 858 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಕ್ವಿಕ್ ರಿಯಾಕ್ಷನ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಮಂಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ ಸೇರಿ, 10 ಸೂಕ್ಷ್ಮ ಪ್ರದೇಶಗಳಲ್ಲಿ ಈ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಪರವಾನಗಿ ಇಲ್ಲದ 27 ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ಇದುವರೆಗೆ ಒಟ್ಟು 166 ಕೋಟಿ ರೂ. ಮೌಲ್ಯದ ನಗದು ಮತ್ತು ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕಿ ಮಾಹಿತಿ ನೀಡಿದ್ದಾರೆ.

Advertisements